ಅರಣ್ಯ ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳದಂತೆ ಆದೇಶ: ಸಿಎಂ ಬಸವರಾಜ ಬೊಮ್ಮಾಯಿ

ಶಿರಸಿ: ಪಾರಂಪರಿಕ ಅರಣ್ಯ ಅತಿಕ್ರಮಣದಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಅರಣ್ಯ ಇಲಾಖೆಗೆ ಆದೇಶ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶಿರಸಿಯಲ್ಲಿ ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾವೇರಿ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ, ಅರಣ್ಯ ಅತಿಕ್ರಮಣದ ಹಳೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳದಿರಲು ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವುದಿಲ್ಲ. ಈ ಬಗ್ಗೆ ಅರಣ್ಯ ಇಲಾಖೆಗೆ ಸೂಚನೆ ನೀಡಲಾಗಿದ್ದು, ಯಾವುದೇ ಆತಂಕ ಬೇಡ ಎಂದು ತಿಳಿಸಿದ್ದಾರೆ.
ಅರಣ್ಯ ಭೂಮಿ ಅತಿಕ್ರಮಣ ಮಾಡಿದವರಿಗೆ ಮಂಜೂರಾತಿಗೆ ಸಂಬಂಧಿಸಿದಂತೆ ಮೂರು ತಲೆಮಾರಿನ ದಾಖಲಾತಿ ನೀಡಬೇಕು ಎನ್ನುವ ನಿಯಮಾವಳಿ ಬದಲು ಒಂದೇ ತಲೆಮಾರಿನ ದಾಖಲೆ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ಗೆ ಸರ್ಕಾರದ ಅಭಿಪ್ರಾಯ ತಿಳಿಸಲಾಗಿದೆ ಎಂದು ಹೇಳಿದ್ದಾರೆ.